ನವದೆಹಲಿ: ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (DPR) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವ ಪ್ರಶ್ನೆ ಇಲ್ಲ ಎಂಬುದನ್ನು ಒತ್ತಿ ಹೇಳಿದರು.
ಈ ವರ್ಷಾಂತ್ಯಕ್ಕೆ ಪುನಶ್ಚೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಪುನಾ ಹೊಸದಾಗಿ ಇಡೀ ಕಾರ್ಖಾನೆಯನ್ನು ಹೊಸದಾಗಿ ಅತ್ಯಾಧುನಿಕವಾಗಿ ನಿರ್ಮಾಣ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರೇ ಈ ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿದರು.
ಇಡೀ ಕಾರ್ಖಾನೆಯನ್ನು ಹೊಸದಾಗಿ ಮರು ನಿರ್ಮಾಣ ಮಾಡಬೇಕಿದೆ. ಸುಮಾರು ₹8000ರಿಂದ 10,000 ಕೋಟಿ ಹೂಡಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ ಆ ಕಾರ್ಖಾನೆ ಭಾರತೀಯ ಉಕ್ಕು ಪ್ರಾಧಿಕಾರದ (SAIL) ಅಧೀನದಲ್ಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರದಲ್ಲಿ ಉಕ್ಕು ಕ್ಷೇತ್ರದಲ್ಲಿ ಪ್ರಾಧಿಕಾರ ಒಂದು ಲಕ್ಷ ಕೋಟಿ ಮೊತ್ತ ಹೂಡಿಕೆ ಮಾಡಲಿದೆ. ಅದೇ ಸಂದರ್ಭದಲ್ಲಿ ವಿಐಎಸ್ ಎಲ್ ಕಾರ್ಖಾನೆಯನ್ನು ಕೂಡ ಪುನಶ್ಚೇತನಗೊಳಿಸಲಾಗುವುದು ಎಂದು ಸಚಿವರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು 2030ರ ಹೊತ್ತಿಗೆ ದೇಶೀಯವಾಗಿ ವಾರ್ಷಿಕ 300 ದಶಲಕ್ಷ ಟನ್ ಸ್ಟೀಲ್ ಉತ್ಪಾದನೆ ಗುರಿ ನಿಗದಿ ಮಾಡಿದ್ದು, ಅದಕ್ಕೆ ಪೂರಕವಾಗಿ ಸರಕಾರಿ ಸ್ವಾಮ್ಯದಲ್ಲಿರುವ ಉಕ್ಕು ಸ್ಥಾವರಗಳನ್ನು ಬಲಪಡಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಅವರು ಹೇಳಿದರು.
