ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಎಎಸ್ಪಿ ಎನ್.ವಿ.ಬರಮನಿ ಅವರಿಗೆ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮಾಡಿ ಸಮಾಧಾನಪಡಿಸಿದ್ದಾರೆ.
ಕೈ ಎತ್ತಿ ರೇಗಿದ್ದ ಸಿಎಂ: ಏ.28ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನಗೊಂಡು, ವೇದಿಕೆಯಲ್ಲೇ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿ.ಬರಮನಿ ಅವರಿಗೆ ಕೈ ಎತ್ತಿ ರೇಗಿದ್ದರು. ಈ ಹಿನ್ನೆಲೆಯಲ್ಲಿ ನೊಂದಿದ್ದ ಭರಮನಿ ಸ್ವಯಂ ನಿವೃತ್ತಿ ಕೋರಿ ಗೃಹ ಇಲಾಖೆಗೆ ಒಂದು ತಿಂಗಳ ಹಿಂದೆ ಮನವಿ ಸಲ್ಲಿಸಿದ್ದರು.
ಉದ್ದೇಶಪೂರ್ವಕವಾಗಿ ಆ ರೀತಿ ಮಾಡಿಲ್ಲ-ಸಿಎಂ: ಸಿಎಂ ಸಿದ್ದರಾಮಯ್ಯ ಇದೀಗ ಭರಮನಿ ಅವರಿಗೆ ದೂರವಾಣಿ ಕರೆ ಮಾಡಿ ಸಮಾಧಾನಪಡಿಸಿದ್ದಾರೆ. “ಸ್ವಯಂನಿವೃತ್ತಿ ನಿರ್ಧಾರ ಬೇಡ. ಅದನ್ನು ವಾಪಸ್ ಪಡೆಯಿರಿ. ನಾನು ಅಂದು ಉದ್ದೇಶಪೂರ್ವಕವಾಗಿ ಆ ರೀತಿ ಮಾಡಿಲ್ಲ. ನಿಮಗೆ ಅಗೌರವ ತೋರಬೇಕು ಎಂದು ಮಾಡಿದ್ದಲ್ಲ. ಅಪಮಾನ ಮಾಡುವ ಉದ್ದೇಶ ನನಗಿರಲಿಲ್ಲ” ಎಂದು ಮನವರಿಕೆ ಮಾಡಿದ್ದಾರೆ.
ನೋವಾಗಿದ್ದರೆ ಕ್ಷಮಿಸಿ-ಸಿಎಂ: “ಅಂದು ಕಾಂಗ್ರೆಸ್ ನಡೆಸಿದ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದರು. ಹಾಗಾಗಿ ಕೋಪ ಬಂದು ಮಾತನಾಡಿದ್ದೇನೆ. ಯಾವುದೇ ಬೇಸರ ಮಾಡಿಕೊಳ್ಳಬೇಡಿ. ರಾಜೀನಾಮೆ ವಾಪಸ್ ಪಡೆದುಕೊಳ್ಳಿ. ನೋವಾಗಿದ್ದರೆ ಕ್ಷಮಿಸಿ ಎಂದು ಸಮಾಧಾನಪಡಿಸಿದ್ದಾರೆ” ಎಂದು ತಿಳಿದು ಬಂದಿದೆ.
ಎಂದಿನಂತೆ ಕರ್ತವ್ಯಕ್ಕೆ ಹಾಜರಾದ ಎಎಸ್ಪಿ ಭರಮನಿ: ಎಎಸ್ಪಿ ಭರಮನಿ ಇಂದು ಕರ್ತವ್ಯಕ್ಕೆ ಹಾಜರಾದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿರುವ ಅವರ ಕಚೇರಿಗೆ ಆಗಮಿಸಿ ಎಂದಿನಂತೆ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ.
ಎಸ್ಪಿ ಡಾ.ಗೋಪಾಲ ಬ್ಯಾಕೋಡ ಅವರೊಂದಿಗೆ ಚರ್ಚಿಸಿ ಬಳಿಕ ಕಚೇರಿಗೆ ಆಗಮಿಸಿದ ಭರಮನಿ ಮಾಧ್ಯಮದವರೊಂದಿಗೆ ಮಾತನಾಡಿದರು.
“ಹಿರಿಯ ಅಧಿಕಾರಿಗಳು ನನ್ನೊಂದಿಗೆ ಮಾತನಾಡಿದ್ದಾರೆ. ನಾನು ಶಿಸ್ತಿನ ಇಲಾಖೆಯಲ್ಲಿದ್ದೇನೆ. ಸಿಎಂ ಸಾಹೇಬ್ರು ಹಾಗೂ ಗೃಹ ಸಚಿವರು ಮಾತನಾಡಿದ್ದಾರೆ. ನಾನು ಯಾವಾಗಲೂ ಮಾಧ್ಯಮಕ್ಕೆ ಮಾತನಾಡಿಲ್ಲ. ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ” ಎಂದರು.
