Trending

ಧರ್ಮಸ್ಥಳ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

Spread the love

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಡಾ. ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ಎಸ್‌ಐಟಿ ರಚನೆಯಾಗಿದ್ದು, ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿ, ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ.

ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ. 211(ಎ), ಬಿ.ಎನ್.ಎಸ್ ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಇದರ ಸಂಬಂಧ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಬಹುದಾದ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಪತ್ರ ಬರೆದ ಹಿನ್ನೆಲೆಯಲ್ಲಿ ಸರ್ಕಾರ ಎಸ್‌ಐಟಿ ರಚಿಸಿದೆ.

ಡಾ. ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ಎಸ್‌ಐಟಿ

ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಡಾ. ಪ್ರಣವ್ ಮೊಹಾಂತಿ ಅವರ ನೇತೃತ್ವದ ತಂಡದ ಸದಸ್ಯರನ್ನಾಗಿ ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.ಎನ್.ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾ‌ರ್ ದಯಾಮ ಅವರನ್ನು ನೇಮಕ ಮಾಡಲಾಗಿದೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ, ದಾಖಲಾಗುವ ಇತರೆ ಎಲ್ಲಾ ಕ್ರಿಮಿನಲ್ ಪ್ರಕರಣಗಳ ತನಿಖೆಯನ್ನು ಡಿಜಿ ಮತ್ತು ಐಜಿಪಿ ಅವರು ಈ ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಬೇಕು ಹಾಗೂ ಎಸ್‌ಐಟಿಗೆ ಅವಶ್ಯವಿರುವ ಇತರೆ ಅಧಿಕಾರಿ, ಸಿಬ್ಬಂದಿಯನ್ನು ಒದಗಿಸಬೇಕು. ವಿಶೇಷ ತನಿಖಾ ತಂಡವು ತನಿಖೆಗೆ ಸಂಬಂಧಿಸಿದ ತನಿಖಾ ಪ್ರಗತಿಯನ್ನು ಆಗಿಂದಾಗ್ಗೆ, ಡಿಜಿ ಮತ್ತು ಐಜಿಪಿ ಅವರಿಗೆ ವರದಿ ಮಾಡಬೇಕು. ಸಮಗ್ರ ತನಿಖೆ ಬಳಿಕ ತನಿಖಾ ವರದಿಯನ್ನು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರು ಸರ್ಕಾರಕ್ಕೆ ಶೀಘ್ರ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

 

[pj-news-ticker]