ವಾಷಿಂಗ್ಟನ್: ಅಮೆರಿಕ ಭಾರತದ ಮೇಲೆ ಶೇ. 25ರಷ್ಟು ಸುಂಕ (25% Tariff) ವಿಧಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದನ್ನು ಘೋಷಿಸಿದ್ದಾರೆ. ಆ. 1ರಿಂದ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಜತೆಗೆ ರಷ್ಯಾದಿಂದ ತೈಲ ಮತ್ತು ಮಿಲಿಟರಿ ಶಸ್ತ್ರಾಸ್ತ್ರ ಖರೀದಿಸುವ ಕಾರಣ ಭಾರತ ಹೆಚ್ಚುವರಿ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ವೇದಿಕೆ ಟ್ರುಥ್ ಸೋಶಿಯಲ್ನಲ್ಲಿ ಮಾಹಿತಿ ನೀಡಿದ್ದಾರೆ.
ಭಾರತ ಮತ್ತು ಅಮೆರಿಕ ಮಧ್ಯೆ ಸ್ನೇಹ ಸಂಬಂಧ ಇದೆಯಾದರೂ ಕಡಿಮೆ ವ್ಯವಹಾರ ಮಾಡಿವೆ ಎಂದು ಅವರು ಹೇಳಿದ್ದಾರೆ.
ಟ್ರಂಪ್ ಹೇಳಿದ್ದೇನು?
“ನೆನಪಿಡಿ, ಭಾರತ ನಮ್ಮ ಸ್ನೇಹಿತನಾಗಿದ್ದರೂ ನಾವು ತುಲನಾತ್ಮಕವಾಗಿ ಕಡಿಮೆ ವ್ಯವಹಾರ ನಡೆಸಿದ್ದೇವೆ. ಯಾಕೆಂದರೆ ಅವರ ಸುಂಕಗಳು ತುಂಬಾ ಹೆಚ್ಚಿವೆ. ವಿಶ್ವದಲ್ಲೇ ಅತ್ಯಧಿಕವಾಗಿವೆ. ಅವರು ಯಾವುದೇ ದೇಶಕ್ಕಿಂತ ಅತ್ಯಂತ ಕಠಿಣ ಮತ್ತು ಅಸಹ್ಯಕರವಾದ ವಿತ್ತೀಯವಲ್ಲದ ವ್ಯಾಪಾರ ಅಡೆತಡೆಗಳನ್ನು ಹೊಂದಿದ್ದಾರೆʼʼ ಎಂದು ಟ್ರಂಪ್ ಬರೆದುಕೊಂಡಿದ್ದಾರೆ.
ಮುಂದುವರಿದು, “ಅಲ್ಲದೆ, ಅವರು ಯಾವಾಗಲೂ ತಮ್ಮ ಬಹುಪಾಲು ಮಿಲಿಟರಿ ಉಪಕರಣಗಳನ್ನು ರಷ್ಯಾದಿಂದಲೇ ಖರೀದಿಸಿದ್ದಾರೆ. ಚೀನಾದೊಂದಿಗೆ ರಷ್ಯಾದ ಅತಿದೊಡ್ಡ ಇಂಧನ ಖರೀದಿದಾರರಾಗಿದ್ದಾರೆ. ಆದ್ದರಿಂದ ಭಾರತವು ಆ. 1ರಿಂದ ಶೇ. 25ರಷ್ಟು ಸುಂಕದೊಂದಿಗೆ ದಂಡವನ್ನೂ ಪಾವತಿಸಲಿದೆ. ಈ ವಿಷಯದ ಬಗ್ಗೆ ಗಮನ ಹರಿಸಿದ್ದಕ್ಕೆ ಧನ್ಯವಾದಗಳು” ಎಂದಿದ್ದಾರೆ.
