ರಾಯಚೂರು: ಪತಿಯನ್ನು ಪತ್ನಿಯೇ ನದಿಗೆ ತಳ್ಳಿದ ಪ್ರಕರಣಕ್ಕೆ ಸಂಬಂಧಿಸಿ ಬಾಲ್ಯವಿವಾಹ ಆರೋಪದಲ್ಲಿ ತಾತಪ್ಪನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ರಾಯಚೂರಿನ ಗುರ್ಜಾಪುರ ಬ್ಯಾರೇಜ್ ಬಳಿ ಪತ್ನಿಯೇ ಪತಿಯನ್ನು ಕೃಷ್ಣಾ ನದಿಗೆ ತಳ್ಳಿದ ಆರೋಪ ಕೇಳಿಬಂದಿತ್ತು. ಬಳಿಕ ಪತಿ ತಾತಪ್ಪ ಮೇಲೆ ಪೋಕ್ಸೊ ಹಾಗೂ ಬಾಲ್ಯ ವಿವಾಹ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ತಾತಪ್ಪನನ್ನು ಇದೀಗ ರಾಯಚೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಜು.21 ರಂದು ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ತಾತಪ್ಪನನ್ನು ರಿಮ್ಸ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಿರುವ ಪೊಲೀಸರು, ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ.
ಇನ್ನು ಅಪ್ರಾಪ್ತೆಯ ಶಿಕ್ಷಣಕ್ಕೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರಿ ಯೋಜನೆಗಳ ಅಡಿ ಕೂಡಲೇ ಕ್ರಮಕೈಗೊಳ್ಳಬೇಕು, ಆ ಬಗ್ಗೆ ಆಯೋಗಕ್ಕೆ ವರದಿ ಕೊಡಬೇಕು ಅಂತ ರಾಯಚೂರು ಹಾಗೂ ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಅಧಿಕಾರಿಗಳಿಗೆ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಸದಸ್ಯ ಶಶಿಧರ್ ಕೋಸಂಬೆ ಸೂಚಿಸಿದ್ದಾರೆ.
