Trending

ರಾಜ್ಯಾದ್ಯಂತ ಖಾಲಿ ಇರುವ 16,000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ ಘೋಷಣೆ

Spread the love

ಶಿವಮೊಗ್ಗ : ರಾಜ್ಯಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಅಂದಾಜು 16000 ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.

ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆ ಸಂದೇಶ ನೀಡಿದರು.

ಈ ಜಿಲ್ಲೆ ಅನೇಕ ಹೋರಾಟಗಾರರಿಗೆ ಜನ್ಮ ನೀಡಿದೆ, ರಾಜ್ಯದ ರಾಜಕೀಯ ಕ್ಷೇತ್ರದಲ್ಲಿ ನಮ್ಮ ತಂದೆಯವರಾದ ಎಸ್. ಬಂಗಾರಪ್ಪ ನವರು ಸೇರಿದಂತೆ ನಾಲ್ಕು ಮುಖ್ಯ ಮಂತ್ರಿಗಳನ್ನು ನೀಡಿದ ಹಾಗೂ ರಾಷ್ಟ್ರ ಕವಿಗಳಾದ ಕುವೆಂಪು, ಜಿ.ಎಸ್. ಶಿವರುದ್ರಪ್ಪ ಮತ್ತು ಸಮಾಜವಾದಿ ಹೋರಾಟಗಾರರಾದ ಶಾಂತವೇರಿ ಗೋಪಾಲಗೌಡ ಸೇರಿದಂತೆ ಅನೇಕರು ಜನಿಸಿದ ಪುಣ್ಯಭೂಮಿ. ನಮ್ಮ ಸರ್ಕಾರವು ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ಕಡಿಮೆ ಅವಧಿಯಲ್ಲಿ ಜಾರಿಗೊಳಿಸಿದೆ. ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜನರಿಗೆ ತಲುಪಿದ್ದು, ಜನರ ಜೀವನದಲ್ಲಿ ಸುಧಾರಣೆ ಕಾಣಬಹುದಾಗಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ ಅಂದಾಜು ರೂ.50,000ಕ್ಕೂ ಅಧಿಕ ಮೊತ್ತದ ಆರ್ಥಿಕ ಸೌಲಭ್ಯ ನೇರವಾಗಿ ದೊರೆಯುತ್ತಿದೆ.

ಗೃಹಲಕ್ಷ್ಮಿಯೋಜನೆಯಿಂದ ಜಿಲ್ಲೆಯ 3,87,638 ಫಲಾನುಭವಿಗಳಿಗೆ ರೂ. 1567.74 ಕೋಟಿಗಳನ್ನು ಡಿಬಿಟಿ ಮೂಲಕ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. ಶಕ್ತಿ ಯೋಜನೆ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ 6.32 ಕೋಟಿ ಮಹಿಳಾ ಪ್ರಯಾಣಿಕರು ಇದುವರೆಗೆ ಪ್ರಯಾಣಿಸಿ, ಈ ಯೋಜನೆಯ ಲಾಭಪಡೆದಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಈ ವರೆಗೆ ಜಿಲ್ಲೆಯಲ್ಲಿ 3,52,840 ಲಕ್ಷ ಪಡಿತರ ಕಾರ್ಡುದಾರರಿಗೆ ರೂ. 359.97 ಕೋಟಿ ಹಣವನ್ನು ಡಿಬಿಟಿ ಮೂಲಕ ಜಮಾ ಮಾಡಲಾಗಿದೆ. ಈ ವರ್ಷದ ಫೆಬ್ರವರಿಯಿಂದ 10ಕೆಜಿ ಅಕ್ಕಿಯನ್ನು ಪಡಿತರ ಚೀಟಿದಾರರಿಗೆ ನೀಡಲಾಗುತ್ತಿದೆ.

ಗೃಹ ಜ್ಯೋತಿ ಯೋಜನೆಯಡಿ ಇದುವರೆವಿಗೂ 4.69 ಲಕ್ಷ ಕುಟುಂಬಗಳು ಸೌಲಭ್ಯ ಪಡೆಯುತ್ತಿದ್ದು, ಸರ್ಕಾರ ವಿದ್ಯುತ್ ಸಬ್ಸಿಡಿಗಾಗಿ ಮೊತ್ತ ರೂ. 481.04 ಕೋಟಿ ವೆಚ್ಚ ಮಾಡಲಾಗಿದೆ.ಶಿವಮೊಗ್ಗದಿಂದಲೇ ಯುವನಿಧಿ ಯೋಜನೆಗೆ ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ನವರು ಹಾಗೂ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಚಾಲನೆ ನೀಡಿದರು. ಇದುವರೆವಿಗೂ ಈ ಯೋಜನೆಯಡಿ ಜಿಲ್ಲೆಯ 6894 ವಿದ್ಯಾರ್ಥಿಗಳಿಗೆ ರೂ.17.88 ಕೋಟಿಯನ್ನು ಅವರ ಖಾತೆಗಳಿಗೆ ಜಮಾಮಾಡಲಾಗಿದೆ.

ಈ ಬಾರಿ ಉತ್ತಮ ಮಳೆಯಿಂದಾಗಿ ಜಿಲ್ಲೆಯ ಕೆರೆ, ಕಾಲುವೆಗಳಲ್ಲಿ ನೀರು ತುಂಬಿ, ಕೃಷಿ ಚಟುವಟಿಕೆಗೆ ಅನುಕೂಲವಾಗಿದೆ. ಇದರಿಂದಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಜಿಲ್ಲೆಗೆ ನೂತನವಾಗಿ 5 ಪಶು ಚಿಕಿತ್ಸಾಲಯ ಕಟ್ಟಡಗಳನ್ನು ಮಂಜೂರು ಮಾಡಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ.

ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಸೊರಬ ಹಾಗೂ ಭದ್ರಾವತಿ ವಿಧಾನಸಭಾ ಕ್ಷೇತ್ರಕ್ಕೆ ನೂತನ ನೀರಾವರಿ ಯೋಜನೆ ಮಂಜೂರು ಮಾಡಲಾಗಿದ್ದು, ಒಟ್ಟಾರೆ ರೂ.307.80 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಕುಂಸಿ – ಗಾಜನೂರು ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ರೂ.125 ಕೋಟಿ ಅನುಮೊದನೆ ದೊರಕಿದ್ದು, ಕಾಮಗಾರಿಯು ಪ್ರಗತಿಯಲ್ಲಿರುತ್ತದೆ.

2025-26ನೇ ಸಾಲಿನಲ್ಲಿ ಪ್ರಥಮ ಬಾರಿಗೆ ರಾಜ್ಯದ 5000 ಸರ್ಕಾರಿ ಶಾಲೆಗಳಲ್ಲಿ ಎಲ್‌ಜಿ & ಯುಕೆಜಿ ತರಗತಿಗಳು, 4000 ಸರ್ಕಾರಿ ಶಾಲೆಗಳಲ್ಲಿ ದ್ವಿ-ಭಾಷಾ ತರಗತಿಗಳನ್ನು ಹಾಗೂ ರಾಜ್ಯದಲ್ಲಿ 500 ಶಾಲೆಗಳನ್ನು ಕೆ.ಪಿ.ಎಸ್ ಶಾಲೆಗಳಾಗಿ ಉನ್ನತೀಕರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಅಂದಾಜು 16000 ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುತ್ತಿದೆ ಎಂದರು.

ಶಿಕ್ಷಣ ಇಲಾಖೆಯಲ್ಲಿ ಒಂದೇ ಸೂರಿನಡಿಯಲ್ಲಿ ಎಲ್.ಕೆ.ಜಿ ಯಿಂದ ದ್ವಿತೀಯ ಪಿ.ಯು.ಸಿ ವರೆಗೂ ವಿದ್ಯಾಭ್ಯಾಸ ನೀಡುವ ಸಲುವಾಗಿ ಜಿಲ್ಲೆಯಲ್ಲಿ 11 ಕೆ.ಪಿ.ಎಸ್ ಶಾಲೆಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯ 17 ರಿಂದ 20 ಶಾಲೆಗಳನ್ನು ಕೆ.ಪಿ.ಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲು ಯೋಜಿಸಲಾಗಿದೆ. ಜಿಲ್ಲೆಗೆ ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯಿಂದ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳಿಗೆ 02 ವಸತಿ ನಿಲಯಗಳನ್ನು ಘೋಷಿಸಲಾಗಿದೆ ಎಂದರು..

ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸ್ತುತ ದ್ವಿ-ಭಾಷಾ ಮಾಧ್ಯಮ ಶಾಲೆಗಳಿಗೆ ಗಣನೀಯವಾಗಿ ಬೇಡಿಕೆ ಹೆಚ್ಚಿದೆ. ಇದರ ಅನ್ವಯ, ಹಾಲಿ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 171 ದ್ವಿ-ಭಾಷಾ ಮಾಧ್ಯಮ ಶಾಲೆಗಳನ್ನು ತೆರೆಯಲು ಸರ್ಕಾರದಿಂದ ಅನುಮತಿ ನೀಡಲಾಗಿದೆ. ಸರ್ಕಾರದ ಈ ನಿರ್ಧಾರದ ಫಲವಾಗಿ, ಹೆಚ್ಚಿನ ಸಂಖ್ಯೆಯ ಮಕ್ಕಳು ಸರ್ಕಾರಿ ಶಾಲೆಗಳ ಕಡೆಗೆ ಆಕರ್ಷಿತರಾಗಿದ್ದಾರೆ.

ದೇಶದಲೇ ಮೊದಲ ಬಾರಿಗೆ ಜಿಲ್ಲಾ ಮಟ್ಟದಲ್ಲಿ ‘ಅಂಧತ್ವ ಮುಕ್ತ ಶಿವಮೊಗ್ಗ” ಎಂಬ ಅಭಿಯಾನ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯನ್ನು ಉನ್ನತೀಕರಿಸುವುದಲ್ಲದೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ. ಕಿದ್ವಾಯಿ ಮಾದರಿಯ ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿಯು ಪ್ರಗತಿಯಲ್ಲಿದೆ. 50 ಹಾಸಿಗೆಗಳ ಕ್ರಿಟಿಕಲ್ ಕೇರ್ ಯುನಿಟ್ ಮತ್ತು ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಕಟ್ಟಡ ಕಾಮಗಾರಿಗೆ ಶೀಘ್ರದಲಿ ಚಾಲನೆ ದೊರೆಯಲಿದೆ ಹಾಗೂ ಸಿಮ್ಸ್ ನಲ್ಲಿ ಪರಿಶಿಷ, ಜಾತಿ & ಪರಿಶಿಷ ಪಂಗಡ ವೈದ್ಯಕೀಯ ವಿದ್ಯಾರ್ಥಿಗಳಿಗೆ 100 ಹಾಸಿಗೆ ವಸತಿನಿಲಯದ ಕಟ್ಟಡ ಕಾಮಗಾರಿ ಪುಗತಿಯಲ್ಲಿದೆ.

ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ನೀಡಲು ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ. ಭದ್ರಾವತಿಯಲ್ಲಿ ನೂತನ ಕಾರ್ಮಿಕರ ಸಮುದಾಯ ಭವನ ಮತ್ತು ಶಿವಮೊಗ್ಗದ ಹೊರವಲಯ ಸಿದ್ಧಿಪುರದಲ್ಲಿ ವಸತಿ ಕಟ್ಟಡ ನಿರ್ಮಿಸಲಾಗಿದೆ. ಸೊರಬ ತಾಲ್ಲೂಕಿನಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ನೀಡಲು ವಸತಿ ಶಾಲೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ ಎಂದರು.

[pj-news-ticker]