ಬೆಂಗಳೂರು: 2025-26ನೇ ಸಾಲಿನಿಂದಲೇ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಉತ್ತೀರ್ಣ ಅಂಕವನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಕೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಚಿವರು, ಈ ನಿರ್ಧಾರವು ವಿದ್ಯಾರ್ಥಿಗಳ ಉತ್ತೀರ್ಣತಾ ಪ್ರಮಾಣ ಹೆಚ್ಚಿಸುವ ಮತ್ತು ಸಿಬಿಎಸ್ಇ ಹಾಗೂ ನೆರೆ ರಾಜ್ಯಗಳ ಏಕರೂಪ ಪದ್ಧತಿಯನ್ನು ರಾಜ್ಯದಲ್ಲಿ ಅಳವಡಿಸುವ ದೃಷ್ಟಿಯಿಂದ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣವಾಗಲು ಪ್ರಸ್ತುತ 625 ಅಂಕಗಳಿಗೆ ಕನಿಷ್ಠ ಶೇ. 35ರಷ್ಟು (219 ಅಂಕಗಳು) ಗಳಿಸುವುದು ಕಡ್ಡಾಯವಿತ್ತು. ಹೊಸ ನಿಯಮದ ಪ್ರಕಾರ, 625 ಅಂಕಗಳಿಗೆ ಕನಿಷ್ಠ 206 ಅಂಕ (ಶೇ. 33) ಗಳಿಸಿದರೆ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಾರೆ. ಪ್ರತಿ ವಿಷಯದಲ್ಲಿ ಕಡ್ಡಾಯವಾಗಿ ಕನಿಷ್ಠ 30 ಅಂಕ ಪಡೆಯಲೇಬೇಕು.
ದ್ವಿತೀಯ ಪಿಯುಸಿ ಪರೀಕ್ಷೆ ಉತ್ತೀರ್ಣವಾಗಲು 600 ಅಂಕಗಳಿಗೆ ಕನಿಷ್ಠ ಶೇ. 35ರಷ್ಟು (210 ಅಂಕಗಳು) ಪಡೆಯಬೇಕಿತ್ತು. ಹೊಸ ನಿಯಮದಂತೆ, 600 ಅಂಕಗಳಿಗೆ ಕನಿಷ್ಠ 198 ಅಂಕ (ಶೇ. 33) ಪಡೆದರೆ ಪಾಸ್ ಆಗುತ್ತಾರೆ. ಪ್ರತಿ ವಿಷಯದಲ್ಲಿ ಲಿಖಿತ ಮತ್ತು ಆಂತರಿಕ ಅಂಕ ಸೇರಿ 30 ಅಂಕ ಬರುವುದು ಕಡ್ಡಾಯ.
ಪಾಸಿಂಗ್ ಮಾರ್ಕ್ಸ್ ಕಡಿತ ಮಾಡುವ ವಿಚಾರವನ್ನು ಶಾಲಾ ಪರೀಕ್ಷಾ ಮಂಡಳಿ ಕರಡು ಅಧಿಸೂಚನೆ ಮೂಲಕ ಸಾರ್ವಜನಿಕ ಡೊಮೇನ್ಗೆ ಹಾಕಿ ಅಭಿಪ್ರಾಯ ಕೇಳಿತ್ತು. ಶೇ. 33ರಷ್ಟು ಅಂಕದ ಪರವಾಗಿ 701 ಪತ್ರಗಳು ಬಂದಿದ್ವು. ಆದರೆ, ಶೇ. 35 ಅಂಕ ಪರವಾಗಿ ಕೇವಲ 8 ಪತ್ರಗಳು ಬಂದಿದ್ದವು. ಹೀಗಾಗಿ ಬಹುಮತದ ಅಭಿಪ್ರಾಯಕ್ಕೆ ಮನ್ನಣೆ ನೀಡಿ 2025-26ನೇ ಸಾಲಿನಿಂದ ಶೇ. 33ರಷ್ಟು ಮಾನದಂಡವನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಈ ನೂತನ ನಿಯಮವು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಾಜರಾಗುವ ಹೊಸ (REGULAR) ವಿದ್ಯಾರ್ಥಿಗಳು, ಪುನರಾವರ್ತಿತ (REPEATER) ಹಾಗೂ ಖಾಸಗಿ (PRIVATE) ಅಭ್ಯರ್ಥಿಗಳಿಗೂ ಅನ್ವಯವಾಗುತ್ತದೆ.
