Trending

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೇ ಸಾವು

Spread the love

ಮಂಡ್ಯ: ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ರೈತ ಬುಧವಾರ ಬೆಳಗ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕೆ.ಆರ್. ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಎಂ.ಡಿ (55) ಮೃತಪಟ್ಟವರು. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಬೇಸತ್ತಿದ್ದ ಇವರು, ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಭವ್ಯವನದಲ್ಲಿ ಮಂಗಳವಾರ ಬೆಳಗ್ಗೆ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದರು.

ಬೆಂಕಿ ಹಚ್ಚಿಕೊಳ್ಳುತ್ತಿದ್ದಂತೆ ಸಮೀಪದಲ್ಲಿದ್ದ ಸಾರ್ವಜನಿಕರು ಬೆಂಕಿ ನಂದಿಸಿ, ನಗರದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದರು. ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.

ಈ ಘಟನೆ ಖಂಡಿಸಿ ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಸಂಜೆ ಕನ್ನಡಪರ ಮತ್ತು ರೈತಪರ ಹೋರಾಟಗಾರರು “ಹೊತ್ತಿ ಉರಿದ ರೈತನಿಗೆ ನ್ಯಾಯ ಕೊಡಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ಆಗ್ರಹಿಸಿ ಅವರು ಕೂಡ ಪ್ರತಿಭಟನೆ ನಡೆಸಿದ್ದರು. ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಈಗಾಗಲೇ ದೂರು ದಾಖಲಾಗಿದೆ.

ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದ ಅಗ್ನಿಶಾಮಕ ಸಿಬ್ಬಂದಿ: ಮಂಜೇಗೌಡ ಬೆಂಕಿ ಹಚ್ಚಿಕೊಳ್ಳುತ್ತಿದ್ದಂತೆ ಅಲ್ಲಿದ್ದ ಜನರು ನೀರು ಹಾಕಿ ಬೆಂಕಿ ನಂದಿಸಿದ್ದರು. ಮೊದಲು ವಿದ್ಯುತ್ ಶಾಕ್​ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಿದ ಮಂಜೇಗೌಡ, ನಂತರ ತಾವೇ, ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಗಿ ಹೇಳಿದ್ದರು. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅವರನ್ನು ರಕ್ಷಿಸಿ, ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.

[pj-news-ticker]